ಶಿವಮೊಗ್ಗ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಅವರ ಭೀಕರ ಕೊಲೆ l ಪ್ರಕರಣದ ಕುರಿತು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಕೊಲೆ ಆರೋಪಿ ಫಯಾಜ್‌ನನ್ನು ಎನ್‌ಕೌಂಟರ್ ಮಾಡಬೇಕು ಎಂಬುದಾಗಿ ನೇಹಾ ಹಿರೇಮಠ ಅವರ ತಂದೆ ನಿರಂಜನ್ ಹಿರೇಮಠ ಅವರು ಆಗ್ರಹಿಸಿದ್ದಾರೆ.
ಪ್ರಕರಣದ ಕುರಿತು ತನಿಖೆಯಾಗಬೇಕು ಎಂಬುದಾಗಿ ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ. ಪ್ರಕರಣದ ಕುರಿತು ಕೂಲಂಕಷ ತನಿಖೆಯಾಗಲಿ ಎಂಬ ದೃಷ್ಟಿಯಿಂದ ಸಿಐಡಿ ತನಿಖೆಗೆ ವಹಿಸಲು ತೀರ್ಮಾನಿಸಿದ್ದೇವೆ” ಎಂಬುದಾಗಿ ಹೇಳಿದ್ದಾರೆ.
ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಲವ್ ಜಿಹಾದ್ ಆರೋಪವೂ ಕೇಳಿಬಂದಿವೆ. ಅದರಲ್ಲೂ, ನೇಹಾ ಹಿರೇಮಠ ಪ್ರಕರಣವು ಚುನಾವಣೆ ಹೊತ್ತಿನಲ್ಲಿ ರಾಜ್ಯ ಸರ್ಕಾರಕ್ಕೆ ಮುಜುಗರ ತಂದಿದೆ. ಹಾಗಾಗಿ, ರಾಜ್ಯ ಸರ್ಕಾರವು ಕೊಲೆ ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply